‘ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ
ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ
*************************************

ಮಡಿಕೇರಿ : -ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ, ಉದ್ಯೋಗ, ಆರೋಗ್ಯ, ನೀರಾವರಿ, ಕೈಗಾರಿಕೆ, ವಿದ್ಯುತ್, ಆರ್ಥಿಕ, ಹೀಗೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದರು ಎಂದು ಸಾಹಿತಿ ಹಾಗೂ ಆಕಾಶವಾಣಿ ನಿವೃತ್ತ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಅವರು ಸ್ಮರಿಸಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಬುಧವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ‘ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141 ನೇ ಜನ್ಮದಿನೋತ್ಸವ ಹಾಗೂ ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಕೊಡಗು ಜಿಲ್ಲೆ ಸೇನಾ ಕ್ಷೇತ್ರ ಹಾಗೂ ಕ್ರೀಡಾ ಪರಂಪರೆಗೆ ಹೆಸರಾಗಿದೆ. ಸೈನಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಜಿಲ್ಲೆಯವರು ತಮ್ಮದೇ ಆದ ಛಾಪು ಮೂಡಿಸಿದ್ದು, ಆ ನಿಟ್ಟಿನಲ್ಲಿ ಈ ಬಗ್ಗೆಯೂ ಸಹ ಅಧ್ಯಯನ ಮಾಡುವಂತಾಗಬೇಕು ಎಂದು ಅವರು ತಿಳಿಸಿದರು.

ವಿಜಯ ವಿಷ್ಣುಭಟ್ ದತ್ತಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸ್ಮಿತಾ ಅಮೃತರಾಜ್ ಅವರು ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಲೋಕ ದರ್ಶನ ಮಾಡಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಅವರು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತು ಬರಹಗಾರರಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಆ ನಿಟ್ಟಿನಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಎಲ್ಲರಿಗೂ ಅವಕಾಶಗಳು ದೊರೆಯುವಂತಾಗಬೇಕು ಎಂದರು.

ಸಾಹಿತಿ ನಾಗೇಶ್ ಕಾಲೂರು ಅವರು ಮಾತನಾಡಿ ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವಿದೆ. ಅವರವರ ಭಾಷೆಯನ್ನು ಪ್ರೀತಿಸಬೇಕು. ಗೌರವಿಸಬೇಕು. ಹಾಗೂ ಇತರ ಭಾಷೆಗಳನ್ನು ಸಹ ಗೌರವಿಸಬೇಕು. ಯಾರೂ ಸಹ ಸಣ್ಣತನ ಪ್ರದರ್ಶಿಸಬಾರದು ಎಂದು ಸಲಹೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಅವರು ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 40 ದತ್ತಿ ಪ್ರಶಸ್ತಿ ಸ್ಥಾಪಿಸಲಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರನ್ನು ಗೌರವಿಸುತ್ತಾ ಬರಲಾಗಿದೆ. ಪ್ರಸಕ್ತ ವರ್ಷದಿಂದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮಗಳನ್ನು ಆರಂಭಿಸಲಾಗಿದೆ ಎಂದರು.

ಸ್ಮಿತಾ ಅಮೃತರಾಜ್ ಅವರ ಸಾಹಿತ್ಯ ವಿಚಾರಧಾರೆ ಹಾಗೂ ಸುಬ್ರಾಯ ಸಂಪಾಜೆ ಅವರ ಸಾಂಸ್ಕøತಿಕ ಮತ್ತು ಆಕಾಶವಾಣಿಯಲ್ಲಿನ ಸೇವೆ ಬಗ್ಗೆ ಗುಣಗಾನ ಮಾಡಿದರು.

Exit mobile version