ಮರಗೋಡು: ಸಂಚಾರ ಯೋಗ್ಯತೆ ಸಂಪೂರ್ಣವಾಗಿ ಕಳೆದುಕೊಂಡಿರುವ ಕಟ್ಟೆಮಾಡು–ಮರಗೋಡು ರಸ್ತೆಯ ದುಸ್ಥಿತಿಯನ್ನು ಖಂಡಿಸಿ ಮರಗೋಡು ಗ್ರಾಮದಲ್ಲಿ ಗ್ರಾಮಸ್ಥರು ರಸ್ತೆ ತಡೆ ಪ್ರತಿಭಟನೆ ನಡೆಸಿದರು. ಕಳೆದ 20 ವರ್ಷಗಳಿಂದ ಈ ಪ್ರಮುಖ ರಸ್ತೆಗೆ ಡಾಂಬರೀಕರಣ ಭಾಗ್ಯ ಸಿಗದೆ ಇರುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ನಿರ್ಲಕ್ಷ್ಯ ಮತ್ತು ಅಧಿಕಾರಿಗಳ ನಿರ್ಲಿಪ್ತ ಧೋರಣೆಯ ವಿರುದ್ಧ ಬೇಸತ್ತ ಗ್ರಾಮಸ್ಥರು ಮರಗೋಡು ಗ್ರಾಮ ಕೇಂದ್ರದಲ್ಲಿ ಜಮಾಯಿಸಿ ರಸ್ತೆ ತಡೆ ನಡೆಸಿದರು. ಸ್ಥಳಕ್ಕೆ ತಕ್ಷಣವೇ ಲೋಕೋಪಯೋಗಿ ಇಲಾಖೆ (PWD) ಅಧಿಕಾರಿಗಳು ಆಗಮಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಪ್ರತಿಭಟನೆ ಮಾಹಿತಿ ತಿಳಿದು ಸ್ಥಳಕ್ಕೆ ಮಡಿಕೇರಿ ಡಿವೈಎಸ್‌ಪಿ ಸೂರಜ್ ಭೇಟಿ ನೀಡಿ, ಸಾರ್ವಜನಿಕರಿಗೆ ಅಡಚಣೆ ಆಗದಂತೆ ರಸ್ತೆ ತಡೆ ಮಾಡದೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಸೂಚನೆ ನೀಡಿದರು. ಈ ನಡುವೆ ರಸ್ತೆಯ ದುಸ್ಥಿತಿಯಿಂದ ಖಾಸಗಿ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿದ ಪರಿಣಾಮ ಪ್ರಯಾಣಿಕರು ಪರದಾಡುವಂತಾಯಿತು.

ಗುಂಡಿ ಬಿದ್ದ ರಸ್ತೆಯಲ್ಲಿ ನಿತ್ಯ ಬೈಕ್ ಸವಾರರು ಉರುಳಿ ಬೀಳುವ ಸ್ಥಿತಿ ನಿರ್ಮಾಣವಾಗಿದ್ದು, ಹದಗೆಟ್ಟ ರಸ್ತೆಯಲ್ಲಿ ವಾಹನ ಸವಾರರು ಪ್ರಾಣಪಣಕ್ಕೆ ಸರ್ಕಸ್ ಮಾಡುವಂತಾಗಿದೆ. ಈ ರಸ್ತೆ ದುರಸ್ತಿಗಾಗಿ ಈಗಾಗಲೇ ಅನುದಾನ ಬಿಡುಗಡೆಯಾಗಿದ್ದರೂ, ಗುತ್ತಿಗೆದಾರರು ಕೆಲಸ ಆರಂಭಿಸದೇ ಇರುವುದೇ ಸಮಸ್ಯೆ ಇನ್ನಷ್ಟು ತೀವ್ರಗೊಳ್ಳಲು ಕಾರಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು.

ತಕ್ಷಣ ರಸ್ತೆ ದುರಸ್ತಿ ಕಾರ್ಯ ಆರಂಭಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದ್ದಾರೆ.

Exit mobile version