
ವಿರಾಜಪೇಟೆ, ಜು.18: ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಶನಿವಾರ ಬಿಟ್ಟಂಗಾಲದಲ್ಲಿ ಹೆಲ್ಮೆಟ್ ಜಾಗೃತಿ ಅಭಿಯಾನ ನಡೆಸಲಾಯಿತು.
ವಿರಾಜಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ (ಡಿವೈಎಸ್ಪಿ) ಶ್ರೀ ಮಹೇಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಅಭಿಯಾನದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮಹತ್ವ, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯ ಹಾಗೂ ಸುರಕ್ಷಿತ ವಾಹನ ಚಾಲನೆ ಕುರಿತು ಅರಿವು ಮೂಡಿಸಲಾಯಿತು.
ಈ ವೇಳೆ ಮಾತನಾಡಿದ ಡಿವೈಎಸ್ಪಿ ಮಹೇಶ್ ಕುಮಾರ್, ಹೆಲ್ಮೆಟ್ ಧರಿಸುವುದು ಕೇವಲ ಕಾನೂನು ಪಾಲನೆಯ ವಿಷಯವಲ್ಲ, ಅದು ಜೀವ ರಕ್ಷಿಸುವ ಅತ್ಯಂತ ಪ್ರಮುಖ ಸುರಕ್ಷತಾ ಕ್ರಮವಾಗಿದೆ ಎಂದು ತಿಳಿಸಿದರು. ಯಾವುದೇ ಸಂದರ್ಭದಲ್ಲೂ ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಲಾಯಿಸಬಾರದು ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಅಲ್ಲದೆ, ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಪಾಲಿಸುವ ಮೂಲಕ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಕರೆ ನೀಡಿದರು.
ಅಭಿಯಾನದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿ ವಾಹನ ಸವಾರರಿಗೆ ಸಂಚಾರ ಸುರಕ್ಷತೆ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಿದರು.

