
ವೀರಾಜಪೇಟೆ: ವೀರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನದಲ್ಲಿ ನಡೆದಿರುವ ಎನ್ನಲಾದ ದುಷ್ಕೃತ್ಯವನ್ನು ಖಂಡಿಸಿ ಪ್ರತಿಭಟನೆ ಮುಂದುವರಿದಿದೆ. ಘಟನೆಯ ಸಂಬಂಧ ಇಂದು ಬೆಳಿಗ್ಗೆಯಿಂದಲೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದು, ಇದಕ್ಕೆ ಕಾರಣವೇನು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಪ್ರಕರಣ ದಾಖಲಿಸುವಲ್ಲಿ ವಿಳಂಬವಾಗುತ್ತಿರುವುದಕ್ಕೆ ಯಾರಾದರೂ ಒತ್ತಡ ಕಾರಣವೇ ಎಂಬ ಅನುಮಾನ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವದಂತೆ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ತಪ್ಪಿತಸ್ಥರು ಯಾರೇ ಆಗಿದ್ದರೂ ಯಾವುದೇ ಒತ್ತಡಕ್ಕೂ ಮಣಿಯದೆ ಕಾನೂನು ಕ್ರಮ ಕೈಗೊಳ್ಳಬೇಕು. ಘಟನೆಯಿಂದ ಜಿಲ್ಲೆಯ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸಂಬಂಧಪಟ್ಟ ಪೊಲೀಸ್ ಹಾಗೂ ಆಡಳಿತಾಧಿಕಾರಿಗಳು ಪ್ರಕರಣದ ಕುರಿತು ಸ್ಪಷ್ಟನೆ ನೀಡಿ ತ್ವರಿತವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

