ಕುಶಾಲನಗರ: ಜನರ ತೆರಿಗೆ ಹಣದಲ್ಲಿ ನಿರ್ಮಿಸಿರುವ ಶೌಚಾಲಯವನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸದೆ ಬೀಗ ಹಾಕಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ಕುಶಾಲನಗರ ಪುರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಶಾಲನಗರ ಪುರಸಭೆ ಕಚೇರಿಗೆ ಪ್ರತಿದಿನ ಕಂದಾಯ ಪಾವತಿ, ಖಾತೆ ಬದಲಾವಣೆ ಸೇರಿದಂತೆ ವಿವಿಧ ಕೆಲಸಗಳಿಗಾಗಿ ನೂರಾರು ಸಾರ್ವಜನಿಕರು ಆಗಮಿಸುತ್ತಾರೆ. ಆದರೆ ಸಾರ್ವಜನಿಕರಿಗೆ ಕನಿಷ್ಠ ಶೌಚಾಲಯದ ವ್ಯವಸ್ಥೆಯೂ ಇಲ್ಲದಿರುವುದರಿಂದ, ವಿಶೇಷವಾಗಿ ಮಹಿಳೆಯರು, ಮಕ್ಕಳು ಹಾಗೂ ವಯೋವೃದ್ಧರು ತೊಂದರೆ ಅನುಭವಿಸುವಂತಾಗಿದೆ ಎಂದು ಸಂಘಟನೆ ಆರೋಪಿಸಿದೆ.
ಈ ಹಿನ್ನೆಲೆಯಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ ನೇತೃತ್ವದಲ್ಲಿ ಪದಾಧಿಕಾರಿಗಳು ಪುರಸಭೆ ಆವರಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪುರಸಭೆಯ ಕೆಳಭಾಗದ ಪಾರ್ಕಿಂಗ್ ಕಟ್ಟಡದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಶೌಚಾಲಯ ನಿರ್ಮಿಸಲಾಗಿದ್ದು, ಕಾಮಗಾರಿ ಪೂರ್ಣಗೊಂಡು ಬಳಕೆಗೆ ಸಿದ್ಧವಾಗಿದ್ದರೂ ಸಾರ್ವಜನಿಕರಿಗಾಗಿ ತೆರೆಯಲಾಗಿಲ್ಲ ಎಂದು ಅವರು ಆರೋಪಿಸಿದರು.
ಜನರ ತೆರಿಗೆ ಹಣದಲ್ಲಿ ನಿರ್ಮಿಸಿರುವ ಶೌಚಾಲಯವನ್ನು ಕೂಡಲೇ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು. ಇಲ್ಲವಾದರೆ ಪುರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ರಾಜಶೇಖರ್ ಗೌಡ, ಗೌರವಾಧ್ಯಕ್ಷ ಚಂದ್ರು, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜಯಶ್ರೀ ಮುರುಗೇಶ್, ಜಿಲ್ಲಾ ಸಂಚಾಲಕ ಸತೀಶ್, ಕುಶಾಲನಗರ ತಾಲ್ಲೂಕು ಸಂಚಾಲಕ ವಿಪಿ ಚಂದ್ರಣ್ಣ, ನಂಜಪ್ಪ, ರಮೇಶ್ ಹಾಗೂ ವಿಲ್ಸನ್ ಉಪಸ್ಥಿತರಿದ್ದರು.



