ಮಂತರ್ ಗೌಡರಿಗೂ ನಿಗಮ ಮಂಡಳಿ ಸ್ಥಾನ ನೀಡಿ: ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ

ಮಡಿಕೇರಿ: ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಒತ್ತಾಯ ಕೇಳಿಬಂದಿದೆ.

2021ರ ವಿಧಾನ ಪರಿಷತ್ ಚುನಾವಣೆಯ ಮೂಲಕ ಕೊಡಗಿನ ರಾಜಕೀಯಕ್ಕೆ ಪ್ರವೇಶಿಸಿದ ಡಾ. ಮಂತರ್ ಗೌಡ, ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ವಿರುದ್ಧ ಅಲ್ಪ ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು. ಆದರೆ ಚುನಾವಣಾ ಸೋಲಿನಿಂದ ಹಿಂದೆ ಸರಿಯದೆ ಕೊಡಗಿನಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಪ್ರಬಲ ನಾಯಕ ಅಪ್ಪಚ್ಚು ರಂಜನ್ ವಿರುದ್ಧ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಮಡಿಕೇರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಮತ್ತೆ ಬಲ ತುಂಬಿದರು. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಪಕ್ಷದ ವರಿಷ್ಠರು ತಿಳಿಸಿರುವ ಹಿನ್ನೆಲೆಯಲ್ಲಿ, ಇದೀಗ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ.

ಪಕ್ಷದ ಕಷ್ಟದ ಸಮಯದಲ್ಲೂ ಸಂಘಟನೆಗೆ ಬದ್ಧವಾಗಿ ಕೆಲಸ ಮಾಡಿದ ನಾಯಕನಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂಬುದು ಕಾರ್ಯಕರ್ತರ ಪ್ರಮುಖ ಬೇಡಿಕೆಯಾಗಿದೆ.

ಮಂತರ್ ಗೌಡ ಅವರಿಗೆ ನಿಗಮ ಮಂಡಳಿ ಜವಾಬ್ದಾರಿ ನೀಡುವುದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತಷ್ಟು ಬಲಗೊಳ್ಳುವುದಲ್ಲದೆ, ಮಡಿಕೇರಿ ಕ್ಷೇತ್ರದ ಜನರ ಸಮಸ್ಯೆಗಳಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಸ್ಪಂದಿಸಲು ಅವಕಾಶ ದೊರೆಯಲಿದೆ ಎಂದು ಕಾರ್ಯಕರ್ತರು ಅಭಿಪ್ರಾಯಪಟ್ಟಿದ್ದಾರೆ.

ಮಡಿಕೇರಿ ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಪಕ್ಷ ಸಂಘಟನೆ—ಈ ಮೂರು ಕ್ಷೇತ್ರಗಳಲ್ಲೂ ಮಂತರ್ ಗೌಡ ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡುವ ಅಗತ್ಯವಿದೆ. ಹೀಗಾಗಿ ಪಕ್ಷದ ವರಿಷ್ಠರು ಕಾರ್ಯಕರ್ತರ ಬೇಡಿಕೆಯನ್ನು ಪರಿಗಣಿಸಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ಮಂತರ್ ಗೌಡರಿಗೆ ನೀಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಅಲ್ಲದೆ ನಿಗಮ ಮಂಡಳಿ ಸ್ಥಾನ ನೀಡಿದರೆ ಕೊಡಗು ಸೇರಿದಂತೆ ಹಾಸನ ಹಾಗೂ ಚಿಕ್ಕಮಂಗಳೂರು ಜಿಲ್ಲೆಗಳಲ್ಲೂ ಪಕ್ಷ ಸಂಘಟನೆ ಹಾಗೂ ಒಕ್ಕಲಿಗ ಸಮುದಾಯದ ಮತಗಳ ಒಗ್ಗೂಡುವಿಕೆಗೂ ಸಹಕಾರಿಯಾಗಲಿದೆ ಎಂದು ಮಡಿಕೇರಿ ಕ್ಷೇತ್ರದ ಕೈ ಕಾರ್ಯಕರ್ತರು ಹಾಗೂ ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

Exit mobile version