ಭಾಗಮಂಡಲ ಭಗಂಡೇಶ್ವರನ ಸನ್ನಿಧಿಯಲ್ಲಿ ಸಿಎಂ ದಂಪತಿ; ನಾಡಿನ ಸಮೃದ್ಧಿಗಾಗಿ ವಿಶೇಷ ಪೂಜೆ

ಮಡಿಕೇರಿ, ಆ.16: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಅವರ ಧರ್ಮಪತ್ನಿ ಉಷಾ ಶಿವಕುಮಾರ್ ಅವರು ಭಾನುವಾರ ಕೊಡಗಿನ ಪುಣ್ಯಕ್ಷೇತ್ರ ಭಾಗಮಂಡಲಕ್ಕೆ ಭೇಟಿ ನೀಡಿ ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಮೊದಲಿಗೆ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ದಂಪತಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಭಗಂಡೇಶ್ವರ ದೇವಾಲಯಕ್ಕೆ ತೆರಳಿ ಶ್ರೀ ಮಹಾಗಣಪತಿ, ಶ್ರೀ ಮಹಾವಿಷ್ಣು ಹಾಗೂ ಶ್ರೀ ಸುಬ್ರಹ್ಮಣ್ಯ ದೇವರಿಗೆ ಪೂಜೆ ಸಲ್ಲಿಸಿದರು.

ನಾಡಿನಲ್ಲಿ ಉತ್ತಮ ಮಳೆ ಹಾಗೂ ಸಮೃದ್ಧ ಬೆಳೆ ಬರಲಿ. ಜನರಿಗೆ ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ದೊರೆಯಲಿ ಎಂದು ಮುಖ್ಯಮಂತ್ರಿ ಅವರು ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರಸ್ವಾಮಿ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ, ಕ್ರೀಡಾ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಅರುಣ್ ಮಾಚಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ ಸೇರಿದಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version