ರಾಜ್ಯಪಾಲರನ್ನು ಭೇಟಿ ಮಾಡಿದ ಶಾಸಕ ಪೊನ್ನಣ್ಣ; KPSC ಆರೋಪಗಳ ಕುರಿತು ವಿಸ್ತೃತ ಚರ್ಚೆ

ಬೆಂಗಳೂರು: ಕರ್ನಾಟಕ ರಾಜ್ಯದ ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯದ ಪ್ರಸ್ತುತ ರಾಜಕೀಯ, ಆಡಳಿತಾತ್ಮಕ ಹಾಗೂ ಸಾರ್ವಜನಿಕ ಮಹತ್ವದ ವಿಚಾರಗಳ ಕುರಿತು ರಾಜ್ಯಪಾಲರೊಂದಿಗೆ ಚರ್ಚೆ ನಡೆಸಿದರು. ವಿಶೇಷವಾಗಿ ಕರ್ನಾಟಕ ಲೋಕಸೇವಾ ಆಯೋಗ (KPSC) ಎದುರಿಸುತ್ತಿರುವ ವಿವಿಧ ಆರೋಪಗಳು ಹಾಗೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿರುವ ಚರ್ಚೆಗಳ ಕುರಿತು ವಿಸ್ತೃತವಾಗಿ ಮಾತುಕತೆ ನಡೆಯಿತು.

KPSC ಮೂಲಕ ನಡೆಯುವ ನೇಮಕಾತಿ ಪ್ರಕ್ರಿಯೆಗಳು ಪಾರದರ್ಶಕವಾಗಿ ಹಾಗೂ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವ ರೀತಿಯಲ್ಲಿ ನಡೆಯಬೇಕಾದ ಅಗತ್ಯದ ಬಗ್ಗೆಯೂ ಚರ್ಚೆ ನಡೆಸಲಾಯಿತು. ಆಯೋಗದ ಕಾರ್ಯವೈಖರಿ ಮತ್ತು ಅದರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಕುರಿತು ಸೂಕ್ತ ಗಮನಹರಿಸುವ ಅಗತ್ಯವಿದೆ ಎಂಬ ವಿಚಾರವನ್ನು ರಾಜ್ಯಪಾಲರ ಗಮನಕ್ಕೆ ತರಲಾಯಿತು.

ಇದೇ ವೇಳೆ ರಾಜ್ಯದ ಪ್ರಸ್ತುತ ವಿದ್ಯಮಾನಗಳು, ಆಡಳಿತಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆಯೂ ಶಾಸಕ ಪೊನ್ನಣ್ಣ ಅವರು ರಾಜ್ಯಪಾಲರೊಂದಿಗೆ ಅಭಿಪ್ರಾಯ ವಿನಿಮಯ ಮಾಡಿಕೊಂಡರು.

ರಾಜ್ಯದ ಹಿತಾಸಕ್ತಿ ಹಾಗೂ ಸಾರ್ವಜನಿಕರಿಗೆ ಉತ್ತಮ ಆಡಳಿತ ಒದಗಿಸುವ ನಿಟ್ಟಿನಲ್ಲಿ ಪ್ರಮುಖ ವಿಚಾರಗಳ ಕುರಿತು ನಡೆದ ಈ ಭೇಟಿ ಮಹತ್ವ ಪಡೆದುಕೊಂಡಿದೆ.

Exit mobile version