ಸಾರ್ವಜನಿಕ ಆಚರಣೆ ವೇಳೆ ನಿಯಮ ಪಾಲನೆ ಕಡ್ಡಾಯ: ಕೊಡಗು ಜಿಲ್ಲಾ ಪೊಲೀಸ್ ಎಚ್ಚರಿಕೆ
ಮಡಿಕೇರಿ: ಸಾರ್ವಜನಿಕ ಆಚರಣೆಗಳು ಹಾಗೂ ಕಾರ್ಯಕ್ರಮಗಳ ಸಂದರ್ಭದಲ್ಲಿ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಆಚರಣೆ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತ ನೀಡುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸುಪ್ರೀಂ ಕೋರ್ಟ್ ಆದೇಶ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚಿಸಿರುವ ನಿಯಮಗಳನ್ನು ಉಲ್ಲಂಘಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಲಾಗಿದೆ.
ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಇದೇ ವೇಳೆ, ಸಾರ್ವಜನಿಕ ಆಚರಣೆಗಳಲ್ಲಿ ಜನರ ಭಾವನೆಗಳಿಗೆ ಧಕ್ಕೆ ತರುವಂತಹ ಸುಳ್ಳು ಸುದ್ದಿ (Fake News), ತಪ್ಪು ಮಾಹಿತಿ (Misinformation) ಹಾಗೂ ಪ್ರಚೋದನಕಾರಿ ಸಂದೇಶಗಳಿಗೆ ಕಿವಿಗೊಡದೆ ಜಾಗರೂಕರಾಗಿರಬೇಕು ಎಂದು ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.
ಯಾವುದೇ ರೀತಿಯ ವದಂತಿ ಅಥವಾ ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಆರ್ಪ್ರ ಮಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

