ವಿಳಂಬಕ್ಕೆ ಬ್ರೇಕ್ ಹಾಕಿ, ಗುಣಮಟ್ಟಕ್ಕೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಪೊನ್ನಣ್ಣ ಖಡಕ್ ಸೂಚನೆ
ಬೆಂಗಳೂರು: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಬೆಂಗಳೂರಿನ ವಿಕಾಸಸೌಧದಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಲೋಕೋಪಯೋಗಿ ಇಲಾಖೆ ಕೈಗೊಂಡಿರುವ ರಸ್ತೆ ಹಾಗೂ ಸೇತುವೆ ಕಾಮಗಾರಿಗಳ ವಿಳಂಬ ಮತ್ತು ಕೆಲವು ಕಾಮಗಾರಿಗಳ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪೊನ್ನಣ್ಣ, ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಾವೇರಿ ನೀರಾವರಿ ನಿಗಮದ ಕಾವೇರಿ ನದಿ ಸ್ವಚ್ಛತೆ ಹಾಗೂ ಪುನರ್ವಸತಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಬಾಕಿ ಕಾಮಗಾರಿಗಳನ್ನು ವಿಳಂಬವಿಲ್ಲದೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲೋನಿಗಳ ರಸ್ತೆ ಅಭಿವೃದ್ಧಿ, ನಿವೇಶನ ಹಂಚಿಕೆ ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆಯೂ ಸೂಚಿಸಿದರು.
ಸಭೆಯಲ್ಲಿ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಾನಂಡ ಪ್ರತ್ಯು ಉಪಸ್ಥಿತರಿದ್ದರು.


