ವಿರಾಜಪೇಟೆ ಗಣೇಶೋತ್ಸವಕ್ಕೆ ಸಿದ್ಧತೆ: ಸರ್ಕಾರದ ನಿಯಮ ಪಾಲಿಸಿ ವಿಜೃಂಭಣೆಯ ಆಚರಣೆಗೆ ಶಾಸಕ ಪೊನ್ನಣ್ಣ ಕರೆ
ವಿರಾಜಪೇಟೆ: ವಿರಾಜಪೇಟೆಯಲ್ಲಿ ಪ್ರತಿವರ್ಷ ನಡೆಯುವ ಪ್ರಸಿದ್ಧ ಗಣೇಶೋತ್ಸವವನ್ನು ಈ ಬಾರಿಯೂ ಅತ್ಯಂತ ವಿಜೃಂಭಣೆಯಿಂದ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಕರೆ ನೀಡಿದರು.
ವಿರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ಗಣೇಶೋತ್ಸವದ ಪೂರ್ವಭಾವಿ ಸಭೆ ನಡೆಯಿತು. ವಿವಿಧ ಗಣೇಶೋತ್ಸವ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪ್ರಮುಖರೊಂದಿಗೆ ಸಭೆ ನಡೆಸಿದ ಶಾಸಕ ಪೊನ್ನಣ್ಣ ಅವರು, ಸಮಿತಿಗಳ ಸಮಸ್ಯೆಗಳು, ಬೇಡಿಕೆಗಳು ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.
ಪ್ರತಿ ವರ್ಷದಂತೆ ಈ ವರ್ಷವೂ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸಬೇಕು. ಆದರೆ ಆಚರಣೆಯ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದ ಅವರು, ಪ್ರತಿಯೊಂದು ಸಮಿತಿಯೂ ಜವಾಬ್ದಾರಿಯಿಂದ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.
“ಇಷ್ಟು ವರ್ಷಗಳಿಂದ ವಿರಾಜಪೇಟೆಯಲ್ಲಿ ಗಣೇಶೋತ್ಸವ ಯಾವ ರೀತಿಯಲ್ಲಿ ನಡೆಯುತ್ತಿತ್ತೋ, ಅದೇ ಸಂಪ್ರದಾಯ ಮತ್ತು ವೈಭವದೊಂದಿಗೆ ಈ ಬಾರಿಯೂ ನಡೆಯಬೇಕು. ಆದರೆ ಧ್ವನಿವರ್ಧಕ ಬಳಕೆ ಸೇರಿದಂತೆ ಸರ್ಕಾರ ಹೊರಡಿಸಿರುವ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮುಂಜಾಗ್ರತಾ ಕ್ರಮಗಳಲ್ಲಿಯೂ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು” ಎಂದು ಶಾಸಕ ಪೊನ್ನಣ್ಣ ಸೂಚಿಸಿದರು.
ಗಣೇಶೋತ್ಸವವನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ವಿವಿಧ ಸಮಿತಿಗಳ ಬೇಡಿಕೆಗಳನ್ನು ಆಲಿಸಿದ ಶಾಸಕ ಪೊನ್ನಣ್ಣ ಅವರು ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಮಾತನಾಡಿ, ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಮಿತಿಗಳಿಗೆ ಸೂಚಿಸಿದರು.
ಸಭೆಯಲ್ಲಿ ವಿರಾಜಪೇಟೆ ತಾಲೂಕು ತಹಶೀಲ್ದಾರ್ ಪ್ರವೀಣ್, ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾಳೇಟೀರ ಬೋಪಣ್ಣ, ಮಾಜಿ ನಗರಾಧ್ಯಕ್ಷ ಮಾದಂಡ ತಿಮ್ಮಯ್ಯ, ವಕೀಲ ನರೇಂದ್ರ ಕಾಮತ್ ಸೇರಿದಂತೆ ವಿವಿಧ ಗಣೇಶೋತ್ಸವ ಆಚರಣೆ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.


