ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
ಮಡಿಕೇರಿ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತವು ಸೆಪ್ಟೆಂಬರ್ 14ರಂದು ಮದ್ಯ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಜಿಲ್ಲೆಯಲ್ಲಿ ಒಟ್ಟು 630 ಕಡೆಗಳಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ 121 ಕಡೆಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಜಾರಿಗೊಳಿಸಲಾಗಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಸೆಪ್ಟೆಂಬರ್ 13ರಂದು ಆದೇಶ ಹೊರಡಿಸಿದ್ದು, ಸೆಪ್ಟೆಂಬರ್ 14ರ ಬೆಳಗ್ಗೆ 2 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಮದ್ಯ ಮಾರಾಟ ಹಾಗೂ ಸರಬರಾಜನ್ನು ನಿಷೇಧಿಸಲಾಗಿದೆ.
ಈ ಅವಧಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿಗಳು, ಬಾರ್ ಮತ್ತು ರೆಸ್ಟೋರೆಂಟ್ಗಳು, ಕ್ಲಬ್ಗಳು ಸೇರಿದಂತೆ ಮದ್ಯ ಮಾರಾಟಕ್ಕೆ ಸಂಬಂಧಿಸಿದ ವಹಿವಾಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಬೇಕು ಎಂದು ಸೂಚಿಸಲಾಗಿದೆ.
ಮದ್ಯದಂಗಡಿಗಳು ಹಾಗೂ ಇತರೆ ಪರವಾನಗಿ ಹೊಂದಿರುವ ಸಂಸ್ಥೆಗಳು ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ ಹಾಗೂ ಸಂಬಂಧಿಸಿದ ಅಧಿಕಾರಿಗಳು ನಿಷೇಧಾಜ್ಞೆ ಪರಿಣಾಮಕಾರಿಯಾಗಿ ಜಾರಿಯಾಗುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.



