“ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
ಕೊಡಗಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕಾಡಾನೆ ಹಾಗೂ ಹುಲಿ ದಾಳಿಗಳ ಬಗ್ಗೆ ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಅಮ್ಮಣಿಚಂಡ ರಂಜಿ ಪೂಣಚ್ಚ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರು, ಕಾರ್ಮಿಕರು ಹಾಗೂ ಸಾಕುಪ್ರಾಣಿಗಳ ಜೀವಕ್ಕೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿರುವ ಅವರು, ನಿರಂತರವಾಗಿ ವನ್ಯಜೀವಿ ದಾಳಿಗಳು ನಡೆಯುತ್ತಿದ್ದರೂ ಸರ್ಕಾರ ಹಾಗೂ ಅರಣ್ಯ ಇಲಾಖೆ ಪರಿಣಾಮಕಾರಿ ಮತ್ತು ತುರ್ತು ಕ್ರಮ ಕೈಗೊಳ್ಳಬೇಕಿದೆ ಎಂದು ಒತ್ತಾಯಿಸಿದ್ದಾರೆ.
ಶಾಸಕರು ರಾಜಕೀಯವನ್ನು ಬದಿಗಿಟ್ಟು ಕೊಡಗಿನ ಜನರ ಹಾಗೂ ಸಾಕುಪ್ರಾಣಿಗಳ ಜೀವದ ಬಗ್ಗೆ ಗಂಭೀರವಾಗಿ ಚಿಂತಿಸಬೇಕು. ಇದು ರಾಜಕೀಯ ಮಾಡುವ ಸಮಯವಲ್ಲ, ಜನರ ಜೀವ ಉಳಿಸಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಾದ ಸಮಯ ಎಂದು ಅವರು ಹೇಳಿದ್ದಾರೆ.
ವನ್ಯಜೀವಿ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡುವ ಪರಿಹಾರವನ್ನು ಗಣನೀಯವಾಗಿ ಹೆಚ್ಚಿಸಬೇಕು. ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚ ಸೇರಿದಂತೆ ಸಮರ್ಪಕ ಪರಿಹಾರ ನೀಡಬೇಕು. ಬೆಳೆ, ಜಾನುವಾರು ಹಾಗೂ ಇತರೆ ಆಸ್ತಿ ನಷ್ಟಕ್ಕೆ ವಾಸ್ತವಿಕ ಮೌಲ್ಯಕ್ಕೆ ಅನುಗುಣವಾಗಿ ತ್ವರಿತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಅಪಾಯದ ಪ್ರದೇಶಗಳಿಗೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳನ್ನು ನೇರವಾಗಿ ಆಲಿಸಬೇಕು. ಅಪಾಯಕಾರಿ ಹುಲಿ ಹಾಗೂ ಕಾಡಾನೆಗಳ ಚಲನವಲನದ ಮೇಲೆ ನಿರಂತರ ನಿಗಾ ಇಟ್ಟು, ಜನವಸತಿ ಪ್ರದೇಶಗಳಿಗೆ ಅವುಗಳ ಪ್ರವೇಶ ತಡೆಯಲು ತುರ್ತು ಕಾರ್ಯಾಚರಣೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಆನೆ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಸೋಲಾರ್ ಬೇಲಿ, ರೈಲು ಕಂಬಿ ಬೇಲಿ, ಕಂದಕ ಸೇರಿದಂತೆ ಶಾಶ್ವತ ತಡೆ ಕ್ರಮಗಳನ್ನು ಕೈಗೊಳ್ಳಬೇಕು. ದಾಳಿ ಸಂಭವಿಸಿದ ಸಂದರ್ಭದಲ್ಲಿ ಅರಣ್ಯ ಇಲಾಖೆ, ಪೊಲೀಸ್ ಹಾಗೂ ವೈದ್ಯಕೀಯ ಸಿಬ್ಬಂದಿ ತಕ್ಷಣ ಸ್ಪಂದಿಸುವಂತಹ ತುರ್ತು ಪ್ರತಿಕ್ರಿಯಾ ವ್ಯವಸ್ಥೆ ರೂಪಿಸಬೇಕು ಎಂದು ರಂಜಿ ಪೂಣಚ್ಚ ಹೇಳಿದ್ದಾರೆ.
ಸಂಬಂಧಪಟ್ಟ ಶಾಸಕರು ಅರಣ್ಯ ಇಲಾಖೆ ಹಾಗೂ ಸರ್ಕಾರದ ಅಧಿಕಾರಿಗಳೊಂದಿಗೆ ತಕ್ಷಣ ಸಭೆ ನಡೆಸಿ, ಕೊಡಗಿನ ಮಾನವ–ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಅವರು ಆಗ್ರಹಿಸಿದ್ದಾರೆ.



