ಮಡಿಕೇರಿಯಲ್ಲಿ ಲೋಕಾಯುಕ್ತ ದಾಳಿ: ₹25 ಸಾವಿರ ಲಂಚ ಪಡೆಯುವಾಗ ಜಿಲ್ಲಾ ವಿಮಾ ಅಧಿಕಾರಿ ಲೋಕಾಯುಕ್ತ ಬಲೆಗೆ
ಮಡಿಕೇರಿ: ₹25 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಜಿಲ್ಲಾ ವಿಮಾ ಅಧಿಕಾರಿ ಹೇಮಕುಮಾರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಮಡಿಕೇರಿಯ ಮಹದೇವಪೇಟೆಯಲ್ಲಿರುವ ಕೆಜಿಐಡಿ ಕಚೇರಿಯಲ್ಲಿ ರೋಹಿಣಿ ಎಂಬುವವರಿಂದ ಲಂಚದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೃತ ಪೊಲೀಸ್ ಪೇದೆಯೊಬ್ಬರ ವಿಮಾ ಹಣ ಬಿಡುಗಡೆಗಾಗಿ ಲಂಚದ ಬೇಡಿಕೆ ಇಟ್ಟಿದ್ದರು ಎಂದು ಮಾಹಿತಿ ಲಭ್ಯವಾಗಿದೆ.
ಡಿಎಸ್ಪಿ ದಿನಕರ್ ಶೆಟ್ಟಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹೇಮಕುಮಾರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಲಂಚಕ್ಕೆ ಸಂಬಂಧಿಸಿದಂತೆ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆಯನ್ನೂ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳಿಂದ ಮುಂದಿನ ತನಿಖೆ ಮುಂದುವರಿದಿದೆ.

