ಕಲುಷಿತ ನೀರೇ ನಿವಾಸಿಗಳಿಗೆ ಗತಿ; ಪಂಚಾಯಿತಿ ಅಧಿಕಾರಿಗಳ ವಿರುದ್ಧ ಆಕ್ರೋಶ, ಪ್ರತಿಭಟನೆಯ ಎಚ್ಚರಿಕೆ

ಸುಂಟಿಕೊಪ್ಪ: ಚೆಟ್ಟಳ್ಳಿ ಪೊನ್ನತ್ತಮೊಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೈಸರಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 30 ಕುಟುಂಬಗಳು ಕುಡಿಯುವ ನೀರಿನ ಅಭಾವದಿಂದ ತೀವ್ರ ಸಂಕಷ್ಟ ಎದುರಿಸುತ್ತಿವೆ. ಈ ಹಿಂದೆ ಕಲ್ಪಿಸಲಾಗಿದ್ದ ಕುಡಿಯುವ ನೀರಿನ ಸಂಪರ್ಕವನ್ನು ದಿಢೀರನೆ ಸ್ಥಗಿತಗೊಳಿಸಿರುವುದರಿಂದ ನಿವಾಸಿಗಳು ನೀರಿಗಾಗಿ ಪರದಾಡುವಂತಾಗಿದೆ.

ಕುಡಿಯುವ ನೀರಿನ ಸರಬರಾಜು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಸ್ಥಳೀಯರು ಸಮೀಪದಲ್ಲಿರುವ ಸಣ್ಣ ಕೆರೆಯಂತಿರುವ ಗುಂಡಿಯ ಕಲುಷಿತ ನೀರನ್ನು ಕುಡಿಯಲು ಹಾಗೂ ದಿನನಿತ್ಯದ ಬಳಕೆಗೆ ಬಳಸುತ್ತಿದ್ದಾರೆ ಎನ್ನಲಾಗಿದೆ. ಇದರಿಂದ ನಿವಾಸಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆತಂಕ ಎದುರಾಗಿದೆ. ಕಲುಷಿತ ನೀರಿನ ಬಳಕೆಯಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಕುಡಿಯುವ ನೀರಿನ ಕೊರತೆಯಿಂದ ಬಡ ಕುಟುಂಬಗಳು ಸಂಕಷ್ಟ ಅನುಭವಿಸುತ್ತಿದ್ದರೂ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂಬುದು ನಿವಾಸಿಗಳ ಪ್ರಮುಖ ಆರೋಪವಾಗಿದೆ. ಜನರ ಆರೋಗ್ಯ ಮತ್ತು ಕುಡಿಯುವ ನೀರಿನ ಅಗತ್ಯವನ್ನು ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ನಿವಾಸಿಗಳ ಪ್ರಮುಖ ಬೇಡಿಕೆಗಳೇನು?

ಸ್ಥಗಿತಗೊಳಿಸಿರುವ ಕುಡಿಯುವ ನೀರಿನ ಸಂಪರ್ಕವನ್ನು ತಕ್ಷಣ ಪುನರಾರಂಭಿಸಬೇಕು. ಕಲುಷಿತ ನೀರಿನ ಬಳಕೆಯಿಂದ ಆರೋಗ್ಯ ಸಮಸ್ಯೆಗಳು ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಅಲ್ಲದೆ, ನಿವಾಸಿಗಳಿಗೆ ಉಚಿತ ವೈದ್ಯಕೀಯ ತಪಾಸಣೆ ವ್ಯವಸ್ಥೆ ಕಲ್ಪಿಸಿ, ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಲು ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ನಿವಾಸಿಗಳ ಮತ್ತೊಂದು ಬೇಡಿಕೆಯಾಗಿದೆ.

ಸಮಸ್ಯೆ ಬಗೆಹರಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ

ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣ ಪರಿಹರಿಸದಿದ್ದರೆ ನಿವಾಸಿಗಳೊಂದಿಗೆ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು. ಅಲ್ಲದೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ (ಇಒ) ಅವರಿಗೆ ದೂರು ಸಲ್ಲಿಸಲಾಗುವುದು ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

Exit mobile version