₹48 ಲಕ್ಷದ ರಸ್ತೆ ನಿರ್ಮಾಣ, ಮಳೆ ನೀರಿಗೆ ಮಾತ್ರ ದಾರಿಯಿಲ್ಲ!
ಚರಂಡಿ ವ್ಯವಸ್ಥೆ ಇಲ್ಲದೆ ಅಂಗಡಿಗಳಿಗೆ ನುಗ್ಗುತ್ತಿದೆ ನೀರು; ಲಕ್ಷಾಂತರ ಮೌಲ್ಯದ ಸರಕು ಹಾನಿಯಾಗುವ ಆತಂಕದಲ್ಲಿ ಗೋಣಿಕೊಪ್ಪ ಬೈಪಾಸ್ ವರ್ತಕರು
ವರದಿ: ಜಗದೀಶ್ ಜೋಡುಬೀಟಿ
ಗೋಣಿಕೊಪ್ಪ: ₹48 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಗೋಣಿಕೊಪ್ಪ ಬೈಪಾಸ್ ಕಾಂಕ್ರೀಟ್ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂಬ ಆರೋಪ ಕೇಳಿಬಂದಿದೆ. ರಸ್ತೆಯ ಎರಡೂ ಬದಿಗಳಲ್ಲಿ ವ್ಯಾಪಾರ ನಡೆಸುತ್ತಿರುವ ವರ್ತಕರು ಮಳೆ ನೀರಿನ ಸಮಸ್ಯೆಯಿಂದ ಸಂಕಷ್ಟಕ್ಕೆ ಸಿಲುಕುವ ಆತಂಕ ಎದುರಿಸುತ್ತಿದ್ದಾರೆ.
ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡಿದ್ದರೂ ಮಳೆ ನೀರು ಸರಾಗವಾಗಿ ಹರಿದುಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸದಿರುವುದು ವ್ಯಾಪಾರಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆಯಾದಾಗ ರಸ್ತೆಯ ಮೇಲಿನ ನೀರು ಅಂಗಡಿಗಳತ್ತ ನುಗ್ಗುವ ಸಾಧ್ಯತೆಯಿದ್ದು, ಅಂಗಡಿಗಳಲ್ಲಿ ಸಂಗ್ರಹಿಸಿಟ್ಟಿರುವ ಲಕ್ಷಾಂತರ ರೂಪಾಯಿ ಮೌಲ್ಯದ ಸರಕುಗಳು ಹಾನಿಗೀಡಾಗುವ ಭೀತಿ ಎದುರಾಗಿದೆ.
ರಸ್ತೆ ನಿರ್ಮಾಣಕ್ಕೂ ಮುನ್ನ ಮಳೆ ನೀರು ಹರಿದುಹೋಗಲು ಅಗತ್ಯವಾದ ಒಳಚರಂಡಿ ವ್ಯವಸ್ಥೆ ಕಲ್ಪಿಸಬೇಕಿತ್ತು. ಆದರೆ, ಚರಂಡಿ ನಿರ್ಮಾಣಕ್ಕೆ ಆದ್ಯತೆ ನೀಡದೆ ರಸ್ತೆ ನಿರ್ಮಿಸಿರುವುದರಿಂದ ಸಮಸ್ಯೆ ಎದುರಾಗಿದೆ ಎಂದು ಸ್ಥಳೀಯ ವರ್ತಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಳೆ ನೀರು ಅಂಗಡಿಗಳೊಳಗೆ ನುಗ್ಗಿದರೆ ವ್ಯಾಪಾರಕ್ಕೆ ತೊಂದರೆಯಾಗುವುದರ ಜತೆಗೆ ಆರ್ಥಿಕ ನಷ್ಟವೂ ಸಂಭವಿಸಲಿದೆ. ಹೀಗಾಗಿ, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ಮಳೆ ನೀರು ಸರಾಗವಾಗಿ ಹರಿದುಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕು. ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ವರ್ತಕರು ಒತ್ತಾಯಿಸಿದ್ದಾರೆ.

