ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ
ಮಡಿಕೇರಿ: ಜಿಲ್ಲೆಯಲ್ಲಿ ಪೌರಕಾರ್ಮಿಕರು ಹಾಗೂ ಸಫಾಯಿ ಕರ್ಮಚಾರಿಗಳಿಗೆ ಗುಣಮಟ್ಟದ ಸುರಕ್ಷತಾ ಪರಿಕರ, ಉಚಿತ ಆರೋಗ್ಯ ತಪಾಸಣೆ ಮತ್ತು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೌರಕಾರ್ಮಿಕರಿಗೆ ಇಎಸ್ಐ, ಪಿಎಫ್, ವಸತಿ ಹಾಗೂ ನಿವೇಶನ ಸೌಲಭ್ಯ ಕಲ್ಪಿಸಬೇಕು. ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ಗಳಿಗೆ ಯಾರನ್ನೂ ನೇರವಾಗಿ ಇಳಿಸಬಾರದು ಎಂದು ತಿಳಿಸಿದರು.
ಗೋಣಿಕೊಪ್ಪ ವ್ಯಾಪ್ತಿಯ ಪೌರಕಾರ್ಮಿಕರ ವಸತಿ ಪ್ರದೇಶದ ಸಮಸ್ಯೆಗಳನ್ನು ಪರಿಹರಿಸಿ, ಅರ್ಹ ಪೌರಕಾರ್ಮಿಕರನ್ನು ಖಾಯಂಗೊಳಿಸುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು. ಸುಂಟಿಕೊಪ್ಪದ ಉಲುಗುಲಿ ಗ್ರಾಮದ ಬಡ ಕುಟುಂಬಗಳಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವಂತೆಯೂ ತಿಳಿಸಿದರು.
ಸಭೆಯಲ್ಲಿ ಪೌರಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್. ರಾಜು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು

