ವಿದ್ಯಾರ್ಥಿಗಳಲ್ಲಿ ನಾಯಕತ್ವ ಬೆಳೆಸಲು ಯುವ ಸಂಸತ್ ಸಹಕಾರಿ: ಮಂದ್ರೀರ ಮೋಹನ್ ದಾಸ್
ಮಡಿಕೇರಿ, ಅ.30: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಡಿಕೇರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಯುವ ಸಂಸತ್ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, ಕೊಡಗು ಜಿಲ್ಲೆಯ ಕೃಷಿ, ಪ್ರವಾಸೋದ್ಯಮ, ಶಿಕ್ಷಣ, ಆರೋಗ್ಯ, ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ಮಾದರಿಯಲ್ಲಿ ಚರ್ಚಿಸಿದರು. ಪ್ರಶ್ನೋತ್ತರ, ವಿಧೇಯಕ ಮಂಡನೆ ಹಾಗೂ ಚರ್ಚೆ ಸೇರಿದಂತೆ ಸಂಸತ್ತಿನ ಕಾರ್ಯವಿಧಾನಗಳನ್ನು ಪ್ರಾಯೋಗಿಕವಾಗಿ ಪ್ರದರ್ಶಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಯುವ ಸಂಸತ್ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಸುವುದರೊಂದಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಮೂಡಿಸಲು ಸಹಕಾರಿಯಾಗಿದೆ ಎಂದರು.
ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

