ಬೆಳ್ಳೂರಿನಲ್ಲಿ ಹುಲಿ ದಾಳಿಗೆ ಮತ್ತೊಂದು ಹಸು ಬಲಿ.
ಪದೇ ಪದೇ ದಾಳಿ, ಕಂಗಾಲಾದ ರೈತರು – ಹುಲಿ ನಿಯಂತ್ರಿಸಲು ಸರ್ಕಾರ ವಿಫಲವೇ?
ಬೆಳ್ಳೂರು: ಕೊಡಗಿನಲ್ಲಿ ಹುಲಿ ದಾಳಿಗೆ ಮತ್ತೊಂದು ಹಸು ಬಲಿಯಾಗಿದ್ದು, ರೈತರು ಆತಂಕಕ್ಕೀಡಾಗಿದ್ದಾರೆ. ಬೆಳ್ಳೂರು ಗ್ರಾಮದ ಆಂಗೋಡುವಿನಲ್ಲಿ ಬಾಚೀರ ವಾಸ (ದೇವಯ್ಯ) ಅವರಿಗೆ ಸೇರಿದ ಹಸುವನ್ನು ಗದ್ದೆಯಲ್ಲಿ ಮೇಯಲು ಬಿಟ್ಟಿದ್ದ ವೇಳೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.
ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಹುಲಿ ದಾಳಿಯಿಂದ ರೈತರು ಕಂಗಾಲಾಗಿದ್ದು, ಜಾನುವಾರುಗಳ ರಕ್ಷಣೆಗೆ ಅರಣ್ಯ ಇಲಾಖೆ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಪ್ರಶ್ನೆಗಳು ಎದ್ದಿವೆ.
ಹುಲಿ ಹಾವಳಿ ನಿಯಂತ್ರಿಸಲಾಗದ ಅರಣ್ಯ ಇಲಾಖೆ ಏನು ಮಾಡುತ್ತಿದೆ? ರೈತರ ಸಂಕಷ್ಟಕ್ಕೆ ಶಾಸಕ ಪೊನ್ನಣ್ಣ ಸ್ಪಂದಿಸುವುದು ಯಾವಾಗ? ಎಂದು ಬಿಜೆಪಿ ಕೊಡಗು ಸಾಮಾಜಿಕ ಜಾಲತಾಣದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
ಹುಲಿ ಹಾವಳಿ ನಿಯಂತ್ರಿಸಲು ತುರ್ತು ಕ್ರಮ ಕೈಗೊಳ್ಳಬೇಕು. ರೈತರ ಜಾನುವಾರುಗಳಿಗೆ ಸೂಕ್ತ ರಕ್ಷಣೆ ಒದಗಿಸುವುದರ ಜತೆಗೆ, ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಪರಿಣಾಮಕಾರಿ ಕಾರ್ಯಾಚರಣೆ ನಡೆಸಬೇಕು. ರೈತರ ಬದುಕಿನೊಂದಿಗೆ ಚೆಲ್ಲಾಟವಾಡದೆ ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

