SIR ವಿರುದ್ಧ ಗೋಣಿಕೊಪ್ಪಲಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಗೋಣಿಕೊಪ್ಪಲು: ಕೇಂದ್ರ ಚುನಾವಣಾ ಆಯೋಗದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಗೋಣಿಕೊಪ್ಪಲು ಬಸ್ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, SIR ಹೆಸರಿನಲ್ಲಿ ನೈಜ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಷಡ್ಯಂತ್ರ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಡವರು, ಕೂಲಿ ಕಾರ್ಮಿಕರು, ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಮತದಾನದ ಹಕ್ಕನ್ನು ಕಸಿಯುವ ಪ್ರಯತ್ನ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾಡುವ ದ್ರೋಹ. ಜನರ ಮತದಾನದ ಹಕ್ಕನ್ನು ರಕ್ಷಿಸಲು ಕಾಂಗ್ರೆಸ್ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.
ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು, ‘SIR ವಾಪಸ್ ಪಡೆಯಿರಿ’, ‘ಮತದಾರರ ಹಕ್ಕು ರಕ್ಷಿಸಿ’ ಎಂಬ ಘೋಷಣೆಗಳನ್ನು ಕೂಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮಾಜಿ ಜನಪ್ರತಿನಿಧಿಗಳು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಒಬಿಸಿ, ಎಸ್ಟಿ ಹಾಗೂ ಅಲ್ಪಸಂಖ್ಯಾತ ಘಟಕಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

