ನಾಪೋಕ್ಲು: ಕೊಡಗು ಸೇರಿದಂತೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ 25 ಕನ್ನ ಕಳವು ಹಾಗೂ ಸಾಮಾನ್ಯ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಕಕ್ಕಬ್ಬೆ ನಾಲಡಿ ಗ್ರಾಮದ ಕೆ.ಸಿ. ಆಶೋಕ @ ಕುಡಿಯರ ಆಶೋಕ (36) ಬಂಧಿತ ಆರೋಪಿ. 2014ರಿಂದ ವಿವಿಧ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನ ವಿರುದ್ಧ ಒಟ್ಟು 25 ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.
ಇತ್ತೀಚೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಕಳವು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದ ಬಳಿಕವೂ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ ಹಿನ್ನೆಲೆಯಲ್ಲಿ, ಕೊಡಗು ಜಿಲ್ಲಾಧಿಕಾರಿಗಳು ನವೆಂಬರ್ 2ರಂದು ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಆದೇಶಿಸಿದ್ದರು.
ಆದೇಶದಂತೆ ನವೆಂಬರ್ 3ರಂದು ಆರೋಪಿಯನ್ನು ಬಂಧಿಸಿ ಬಳ್ಳಾರಿ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಲಾಗಿದೆ.

