


ಮಡಿಕೇರಿ: ದೇವಾಲಯಕ್ಕೆ ಪೂಜೆಗೆಂದು ಬಂದಿದ್ದ ಕುಟುಂಬದ ಮೇಲೆ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಗುಂಪೊಂದು ಹಲ್ಲೆ ನಡೆಸಿದೆ ಎನ್ನಲಾದ ಘಟನೆ ಮಡಿಕೇರಿ ನಗರದ ಗೌಳಿ ಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಮುಂಭಾಗದಲ್ಲಿ ಭಾನುವಾರ ಸಂಜೆ ನಡೆದಿದೆ.
ಹೊಸ ಬಡಾವಣೆಯ ನಿವಾಸಿ ಜಿ.ಆರ್. ಸತೀಶ್ ಅವರು ಪತ್ನಿ ಹಾಗೂ ಮಕ್ಕಳಾದ ಸಂಪ್ರೀತ್ ಮತ್ತು ಅಭಿಶೀತ್ ಅವರೊಂದಿಗೆ ದೇವಾಲಯಕ್ಕೆ ಪೂಜೆಗೆಂದು ತೆರಳಿದ್ದರು. ಈ ಸಂದರ್ಭದಲ್ಲಿ ದೇವಾಲಯದ ಮುಂಭಾಗದಲ್ಲಿ ಗುಂಪಾಗಿ ನಿಂತಿದ್ದ ಸ್ಥಳೀಯ ನಿವಾಸಿಗಳಾದ ಶರತ್, ಸೂರಜ್ ಮತ್ತು ಉಮೇಶ್ ಸುಬ್ರಮಣಿ ಎಂಬವರು ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯಲ್ಲಿ ಸತೀಶ್ ಹಾಗೂ ಅವರ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಮೂವರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆಯ ದೃಶ್ಯಾವಳಿ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎನ್ನಲಾಗಿದೆ.
ಈ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಹಿಂದೆಯೂ ಆರೋಪಿಗಳು ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಗಾಯಾಳುಗಳು ಆರೋಪಿಸಿದ್ದಾರೆ.
ಇದೀಗ ಕುಟುಂಬದ ಮೇಲೆ ಕೊಲೆ ಮಾಡುವ ಉದ್ದೇಶದಿಂದಲೇ ಹಲ್ಲೆ ನಡೆಸಲಾಗಿದೆ ಎಂದು ದೂರಿರುವ ಸತೀಶ್ ಹಾಗೂ ಅವರ ಮಕ್ಕಳು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ತಮ್ಮ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕೆಂದು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

