ಜಿಲ್ಲಾಸ್ಪತ್ರೆಯಲ್ಲಿ ರಾತ್ರಿ ವೇಳೆಯೂ ತಜ್ಞ ವೈದ್ಯರ ನಿಯೋಜನೆಗೆ ಮನವಿ
ಮಡಿಕೇರಿ: ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಅಂಗಾಂಗ ದಾನ ಮಾಡಿದ್ದ ಮಡಿಕೇರಿಯ ಚಾಮುಂಡೇಶ್ವರಿ ನಗರದ ಯುವಕ ಯೋಗೇಶ್ ಅವರ ಮನೆಗೆ ಗುರುವಾರ ಸಮಾಜ ಸೇವಕ ಪ್ರಸನ್ನ ಎಡಿಕೇರಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಯೋಗೇಶ್ ಅವರ ಅಂಗಾಂಗ ದಾನದ ಮೂಲಕ ಇತರರ ಬದುಕಿಗೆ ಬೆಳಕಾಗಿರುವ ಕುಟುಂಬದ ಮಾನವೀಯ ಕಾರ್ಯವನ್ನು ಪ್ರಸನ್ನ ಎಡಿಕೇರಿ ಶ್ಲಾಘಿಸಿದರು. ಯೋಗೇಶ್ ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅಂಗಾಂಗ ದಾನದ ಮೂಲಕ ಅವರ ಹೆಸರು ಸದಾ ಸಮಾಜದಲ್ಲಿ ಉಳಿಯಲಿದೆ ಎಂದು ಹೇಳಿದರು.
ಈ ಸಂದರ್ಭ ಕುಟುಂಬಸ್ಥರು ಘಟನೆಯ ಕುರಿತು ಮಾಹಿತಿ ನೀಡುತ್ತಾ, ಯೋಗೇಶ್ ಅವರಿಗೆ ಮೆದುಳು ನಿಷ್ಕ್ರಿಯಗೊಂಡ ಸಂದರ್ಭದಲ್ಲಿ ಒಂದು ಗಂಟೆಯೊಳಗೆ ಆಸ್ಪತ್ರೆಗೆ ಕರೆದೊಯ್ದು ಸೂಕ್ತ ಶಸ್ತ್ರಚಿಕಿತ್ಸೆ ನಡೆಸಿದ್ದರೆ ಜೀವ ಉಳಿಸುವ ಸಾಧ್ಯತೆ ಇತ್ತು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಬಳಿಕ ಮಡಿಕೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಪ್ರಸನ್ನ ಎಡಿಕೇರಿ ಅವರು ಜಿಲ್ಲಾ ಸರ್ಜನ್ ಡಾ. ನಂಜುಂಡಯ್ಯ ಅವರನ್ನು ಭೇಟಿಯಾಗಿ ಆಸ್ಪತ್ರೆಯಲ್ಲಿನ ಸಮಸ್ಯೆಗಳ ಕುರಿತು ಚರ್ಚಿಸಿದರು.
ರಾತ್ರಿ ವೇಳೆಯೂ ತಜ್ಞ ವೈದ್ಯರು ಆಸ್ಪತ್ರೆಯಲ್ಲಿ ಲಭ್ಯವಿರುವಂತೆ ವ್ಯವಸ್ಥೆ ಮಾಡಬೇಕು. ಇದರಿಂದ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ತಕ್ಷಣ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ. ರೋಗಿಗಳು ವೈದ್ಯರ ಚೀಟಿ ಪಡೆಯಲು ಅಲೆದಾಡುವ ಪರಿಸ್ಥಿತಿ ತಪ್ಪಿಸಬೇಕು. ಅಲ್ಲದೆ, ಕೆಲವು ವೈದ್ಯರು ರೋಗಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಸರ್ಜನ್ ಡಾ. ನಂಜುಂಡಯ್ಯ ಅವರು, ಈಗಾಗಲೇ ತಜ್ಞ ವೈದ್ಯರು ರಾತ್ರಿ ವೇಳೆಯೂ ಆಸ್ಪತ್ರೆಯಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಮಾಡಲಾಗುತ್ತಿದೆ. ವೈದ್ಯರ ಲಭ್ಯತೆ ಹಾಗೂ ದೂರವಾಣಿ ಸಂಪರ್ಕದ ಮಾಹಿತಿಯನ್ನು ನೋಟಿಸ್ ಬೋರ್ಡ್ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.
ವೈದ್ಯರು ರೋಗಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳ ಕುರಿತು ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

