ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದೆ: ಗಣ್ಯರ ಅಭಿಮತ
ಕನ್ನಡ ಭಾಷೆ ನಾಡಿನ ಎಲ್ಲರ ಅಸ್ಮಿತೆ; ಗಣ್ಯರ ಅಭಿಮತ
ಮಡಿಕೇರಿ: ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ. ಅದು ನಮ್ಮ ನಾಡಿನ ಇತಿಹಾಸ, ಸಂಸ್ಕೃತಿ ಮತ್ತು ಅಸ್ಮಿತೆಯ ಪ್ರತೀಕ. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಕರೆ ನೀಡಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮೂರ್ನಾಡು ಹೋಬಳಿ ಘಟಕ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಮರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮೂರ್ನಾಡು ಹೋಬಳಿ ಘಟಕದ 3ನೇ ವರ್ಷದ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಕನ್ನಡ ಹಬ್ಬ’ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡಾಭಿಮಾನ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗಬಾರದು. ವರ್ಷದ ಪ್ರತಿದಿನವೂ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಆದ್ಯತೆ ನೀಡಬೇಕು. ಮಕ್ಕಳಲ್ಲಿ ಕನ್ನಡದ ಅಭಿಮಾನ ಬೆಳೆಸುವುದರೊಂದಿಗೆ ಕನ್ನಡ ಸಾಹಿತಿಗಳು ಹಾಗೂ ಸಾಹಿತ್ಯದ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ಕನ್ನಡ ಎಲ್ಲರ ಹೃದಯದ ಭಾಷೆಯಾಗಿದ್ದು, ಭಾಷೆಯ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಕನ್ನಡ ಪುಸ್ತಕಗಳನ್ನು ಓದುವ ಮತ್ತು ಸಾಹಿತಿಗಳನ್ನು ಪ್ರೋತ್ಸಾಹಿಸುವ ಮೂಲಕ ಭಾಷೆಯ ಶ್ರೀಮಂತಿಕೆಯನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು ಎಂದರು.
ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಸಮಾಜ ಸೇವಕ ಅವರೆಮಾದಂಡ ಶರತ್ ಪೂಣಚ್ಚ, ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆ ಪ್ರತಿಯೊಂದು ಮನೆಯಿಂದಲೇ ಆರಂಭವಾಗಬೇಕು. ಮನೆಗಳಲ್ಲಿ ಕನ್ನಡ ಮಾತನಾಡುವ ಮೂಲಕ ದೈನಂದಿನ ವ್ಯವಹಾರದಲ್ಲೂ ಕನ್ನಡಕ್ಕೆ ಆದ್ಯತೆ ನೀಡಿದಾಗ ಮಾತ್ರ ಭಾಷೆಯನ್ನು ಉಳಿಸಿ ಬೆಳೆಸಲು ಸಾಧ್ಯ ಎಂದರು.
ಇಂದಿನ ಜಾಗತಿಕ ರಾಜಕೀಯ ಮತ್ತು ಯುದ್ಧದ ಆತಂಕದ ಪರಿಸ್ಥಿತಿಯಲ್ಲಿ ಇಂಧನ ಸ್ವಾವಲಂಬನೆಗೂ ಆದ್ಯತೆ ನೀಡಬೇಕಿದೆ. ಪ್ರತಿಯೊಂದು ಗ್ರಾಮ ಹಾಗೂ ತಾಲೂಕುಗಳಲ್ಲಿ ಸೌರಶಕ್ತಿಯ ಬಳಕೆಯನ್ನು ಉತ್ತೇಜಿಸಬೇಕು. ಮನೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಬಳಸಿ ಜೈವಿಕ ಅನಿಲ ತಯಾರಿಸುವ ಮೂಲಕ ಅಡುಗೆ ಅನಿಲದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಬಹುದು ಎಂದು ಸಲಹೆ ನೀಡಿದರು. ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಉಳಿವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತೆ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಲಾಯಿತು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಸಮಾಜ ಸೇವಕ ಹರಪಳ್ಳಿ ರವೀಂದ್ರ, ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಜಿ. ಅನಂತಶಯನ ಸೇರಿದಂತೆ ಹಲವು ಗಣ್ಯರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂರ್ನಾಡು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ವಹಿಸಿದ್ದರು. ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್, ತಾಲೂಕು ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 26 ಸಾಧಕರು ಹಾಗೂ ಗಣ್ಯರನ್ನು ಸನ್ಮಾನಿಸಲಾಯಿತು. ‘ಕನ್ನಡ ಸಿರಿ’ ಸ್ಮರಣ ಸಂಚಿಕೆಯ ಮುಖಪುಟ ಅನಾವರಣಗೊಳಿಸಲಾಯಿತು. ಸಾಹಿತಿ ಕಿಗ್ಗಲು ಗಿರೀಶ್ ಅವರ ‘ನಾಪತ್ತೆಯಾದ ನಿವ್ಯಾವತಿ’ ಪುಸ್ತಕ ಬಿಡುಗಡೆ ಮಾಡಲಾಯಿತು.

