ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ
ಮಕ್ಕಳ ಆನ್‌ಲೈನ್ ಚಟುವಟಿಕೆಗಳ ಮೇಲೆ ನಿಗಾ ಇರಲಿ – ಮಾರುತಿ ಎಸ್. ಬಾಗಡೆ
ಮಡಿಕೇರಿ ನ.23: ಮೊಬೈಲ್ ಮತ್ತು ಇಂಟರ್ನೆಟ್ ಬಳಕೆಯಿಂದ ಮಕ್ಕಳ ಮಾನಸಿಕ ಹಾಗೂ ಭಾವನಾತ್ಮಕ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಯಿದ್ದು, ಪೋಷಕರು ಮಕ್ಕಳ ಮೊಬೈಲ್ ಬಳಕೆಗೆ ಮಿತಿ ವಿಧಿಸುವುದರೊಂದಿಗೆ ಅವರ ಆನ್‌ಲೈನ್ ಚಟುವಟಿಕೆಗಳ ಮೇಲೂ ನಿಗಾ ವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಮಾರುತಿ ಎಸ್. ಬಾಗಡೆ ಎಚ್ಚರಿಸಿದ್ದಾರೆ.
ನಗರದ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರಿಗೆ ಆಯೋಜಿಸಿದ್ದ ‘ಸುರಕ್ಷಿತ ಬಾಲ್ಯ ಅಭಿಯಾನ’ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯದಿಂದಲೇ ಮಕ್ಕಳಿಗೆ ಮೊಬೈಲ್ ಬಳಕೆಯ ಮಿತಿಯನ್ನು ತಿಳಿಸಿಕೊಡಬೇಕು. ಮೊಬೈಲ್‌ನಿಂದ ಮಕ್ಕಳನ್ನು ಹೊರತಂದು ಕ್ರೀಡೆ, ಸಾಂಸ್ಕೃತಿಕ ಹಾಗೂ ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗಿಸಬೇಕು. ಸಾಮಾಜಿಕ ಜಾಲತಾಣಗಳ ಮೂಲಕ ವಯಸ್ಸಿಗೆ ಮೀರಿದ ವಿಷಯಗಳು ಮಕ್ಕಳನ್ನು ತಲುಪುತ್ತಿದ್ದು, ಆನ್‌ಲೈನ್ ಶೋಷಣೆಗೂ ಒಳಗಾಗುವ ಅಪಾಯವಿದೆ. ಈ ಬಗ್ಗೆ ಪೋಷಕರು ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ, ವೈಯಕ್ತಿಕ ಅರಿವು ಹಾಗೂ ಮಾನಸಿಕ ಬೆಳವಣಿಗೆಗೆ ಸಂಬಂಧಿಸಿದ ವಿಷಯಗಳ ಕುರಿತು ಕನಿಷ್ಠ 15 ನಿಮಿಷಗಳ ವಿಶೇಷ ಸಮಯ ಮೀಸಲಿಡುವ ಯೋಜನೆ ರೂಪಿಸಬೇಕು. ಮಕ್ಕಳ ಸಮಸ್ಯೆಗಳನ್ನು ಆಲಿಸುವುದರ ಜತೆಗೆ ಅವರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.
3ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಸುರೇಂದ್ರ ಜಿ. ಮಾತನಾಡಿ, ಮಕ್ಕಳ ವರ್ತನೆ, ಹಾಜರಾತಿ ಹಾಗೂ ಶೈಕ್ಷಣಿಕ ಪ್ರಗತಿಯಲ್ಲಿ ಕಂಡುಬರುವ ಬದಲಾವಣೆಗಳನ್ನು ಶಿಕ್ಷಕರು ಸೂಕ್ಷ್ಮವಾಗಿ ಗಮನಿಸಬೇಕು. ಗುಡ್ ಟಚ್ ಮತ್ತು ಬ್ಯಾಡ್ ಟಚ್ ಕುರಿತು ನಿರಂತರ ಅರಿವು ಮೂಡಿಸುವುದರ ಜತೆಗೆ ಮಕ್ಕಳು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳುವ ವಾತಾವರಣ ನಿರ್ಮಿಸಬೇಕು ಎಂದು ಹೇಳಿದರು.
ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎಸ್. ರುದ್ರಪ್ರಸನ್ನ ಮಾತನಾಡಿ, ಶಿಕ್ಷಕರು ಮಕ್ಕಳ ಶೈಕ್ಷಣಿಕ ಪ್ರಗತಿಯಷ್ಟೇ ಅಲ್ಲದೆ ಅವರ ಮಾನಸಿಕ ಒತ್ತಡ ಹಾಗೂ ಆಂತರಿಕ ಸಮಸ್ಯೆಗಳ ಬಗ್ಗೆಯೂ ಗಮನಹರಿಸಬೇಕು. ಶಾಲೆಗಳಲ್ಲಿ ನಿಯಮಿತ ಸಮಾಲೋಚನೆ ಮತ್ತು ಆರೋಗ್ಯ ತಪಾಸಣೆಗೆ ವ್ಯವಸ್ಥೆ ಕಲ್ಪಿಸಬೇಕು ಎಂದರು.
ವಕೀಲರ ಸಂಘದ ಅಧ್ಯಕ್ಷ ಸಿ.ಟಿ. ಜೋಸೆಫ್ ಅನುಭವ ಹಂಚಿಕೊಂಡರು. ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯ ಸೈಬರ್ ಕ್ರೈಂ ವಿಭಾಗದ ಜಿ.ಆರ್. ಅಜಯ್ ಸೈಬರ್ ಅಪರಾಧಗಳ ಕುರಿತು ಮಾಹಿತಿ ನೀಡಿದರೆ, ಅಭಿಲಾಷ್ ಗೌಡ ಮೊಬೈಲ್ ಅಪ್ಲಿಕೇಶನ್‌ಗಳ ಬಗ್ಗೆ ವಿವರಿಸಿದರ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಸ್ವಾಗತಿಸಿ ನಿರೂಪಿಸಿದರು. ಆಡಳಿತ ಸಹಾಯಕ ಜಯಪ್ಪ ವಂದಿಸಿದರು. ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ಶಿಕ್ಷಕರು ಪಾಲ್ಗೊಂಡಿದ್ದರು.

