
ಅಮ್ಮತ್ತಿ, ಜು.17: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ಸಾರ್ವಜನಿಕರಲ್ಲಿ ಸಂಚಾರ ಸುರಕ್ಷತೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಅಮ್ಮತ್ತಿ ಹಾಗೂ ಒಂಟಿಯಂಗಡಿ ಪ್ರದೇಶಗಳಲ್ಲಿ ಹೆಲ್ಮೆಟ್ ಜಾಗೃತಿ ಅಭಿಯಾನ ನಡೆಸಲಾಯಿತು.
ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮಹತ್ವ, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯ ಹಾಗೂ ಸುರಕ್ಷಿತ ವಾಹನ ಚಾಲನೆಯ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಹೆಲ್ಮೆಟ್ ಧರಿಸುವುದು ಕೇವಲ ಕಾನೂನು ಪಾಲನೆಯಷ್ಟೇ ಅಲ್ಲ, ಜೀವ ರಕ್ಷಿಸುವ ಅತ್ಯಂತ ಪ್ರಮುಖ ಸುರಕ್ಷತಾ ಕ್ರಮವಾಗಿದೆ ಎಂದು ಪೊಲೀಸರು ತಿಳಿಸಿದರು. ಯಾವುದೇ ಸಂದರ್ಭದಲ್ಲೂ ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಲಾಯಿಸಬಾರದು ಎಂದು ಮನವಿ ಮಾಡಿದರು.
ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸುವ ಮೂಲಕ ಅಪಘಾತಗಳನ್ನು ತಡೆಗಟ್ಟಲು ಸಾರ್ವಜನಿಕರು ಸಹಕರಿಸಬೇಕು ಎಂದು ಪೊಲೀಸರು ಕರೆ ನೀಡಿದರು.

