ಮಡಿಕೇರಿ: ಗಾನ ಕೋಗಿಲೆ ದಿವಂಗತ ಎಸ್. ಜಾನಕಿ ಅವರ ಸ್ಮರಣಾರ್ಥ ಮಡಿಕೇರಿಯ ಕೊಡಗು ಪತ್ರಿಕಾ ಭವನದ ಟಾಟಾ ಕಾಫಿ ಸಭಾಂಗಣದಲ್ಲಿ ಶುಕ್ರವಾರ ಗೀತ ನಮನ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಲೇಖಕರ ಮತ್ತು ಕಲಾವಿದರ ಬಳಗ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್. ಜಾನಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ನುಡಿ ನಮನ ಹಾಗೂ ಗಾನ ನಮನ ಅರ್ಪಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ‘ಶಕ್ತಿ’ ದಿನಪತ್ರಿಕೆ ಸಂಪಾದಕ ಹಾಗೂ ಗಾಯಕ ಜಿ. ಚಿದ್ವಿಲಾಸ್, ಆರು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಸಂಗೀತ ಲೋಕವನ್ನು ಶ್ರೀಮಂತಗೊಳಿಸಿದ ಎಸ್. ಜಾನಕಿ ಅವರ ಅಗಲಿಕೆ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದರು. ಕಲೆ, ಸಾಹಿತ್ಯ ಹಾಗೂ ಸಂಗೀತವು ಸಮಾಜವನ್ನು ಒಗ್ಗೂಡಿಸುವ ಶಕ್ತಿ ಹೊಂದಿವೆ ಎಂದು ಹೇಳಿದರು.
ಟಿ.ಜಿ. ಪ್ರೇಮಕುಮಾರ್, ಎಂ.ಪಿ. ಕೇಶವಕಾಮತ್ ಸೇರಿದಂತೆ ಗಣ್ಯರು ಮಾತನಾಡಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಗಾಯಕರು ಎಸ್. ಜಾನಕಿ ಅವರ ಜನಪ್ರಿಯ ಗೀತೆಗಳನ್ನು ಹಾಡಿ ಸಂಗೀತ ಪ್ರಿಯರನ್ನು ರಂಜಿಸಿದರು.

