ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
ಗಣೇಶೋತ್ಸವ, ದಸರಾ ಹಾಗೂ ಇತರೆ ಹಬ್ಬಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆದೇಶ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗಣೇಶೋತ್ಸವ, ದಸರಾ ಸೇರಿದಂತೆ ವಿವಿಧ ಹಬ್ಬಗಳ ಸಂದರ್ಭದಲ್ಲಿ ಶಬ್ದ ಮಾಲಿನ್ಯ ನಿಯಂತ್ರಿಸುವ ಉದ್ದೇಶದಿಂದ ‘ಪ್ರೆಶರ್ ಮೈಕ್’ ಅಳವಡಿಕೆ ಹಾಗೂ ಅದನ್ನು ಬಳಸುವ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.
ಸೆಪ್ಟೆಂಬರ್ 14, 2026ರಿಂದ ಅಕ್ಟೋಬರ್ 31, 2026ರವರೆಗೆ ಕೊಡಗು ಜಿಲ್ಲೆಯಾದ್ಯಂತ ಈ ನಿಷೇಧ ಜಾರಿಯಲ್ಲಿರಲಿದೆ.
ದಿ Noise Pollution (Regulation and Control) Rules, 2000ರ ನಿಯಮ 8 ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ, 1963ರ ಕಲಂ 35ರ ಅಡಿಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ಗಣೇಶೋತ್ಸವ ಹಾಗೂ ದಸರಾ ಸೇರಿದಂತೆ ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು, ವೃದ್ಧರು, ಅನಾರೋಗ್ಯದಿಂದ ಬಳಲುತ್ತಿರುವವರು ಸೇರಿದಂತೆ ಎಲ್ಲರಿಗೂ ತೊಂದರೆಯಾಗದಂತೆ ಶಬ್ದ ಮಾಲಿನ್ಯ ನಿಯಂತ್ರಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರೆಶರ್ ಮೈಕ್ ಅಳವಡಿಸುವುದು ಹಾಗೂ ಪ್ರೆಶರ್ ಮೈಕ್ ಅಳವಡಿಸಿರುವ ಧ್ವನಿವರ್ಧಕಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ.
ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೊಡಗು ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

