ಬೈಕ್ ತಪ್ಪಿಸಲು ಹೋಗಿ ಪಲ್ಟಿಯಾದ ಶಾಲಾ ಬಸ್: ಮಕ್ಕಳಿಗೆ ಗಾಯ
ಮಡಿಕೇರಿ: ಮಡಿಕೇರಿ ಸಮೀಪದ ಕಾಟಕೇರಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿಯಾದ ಘಟನೆ ನಡೆದಿದೆ.
ಮದೆನಾಡಿನ ಬಿಜಿಎಸ್ ಶಾಲೆಗೆ ಸೇರಿದ ಶಾಲಾ ಬಸ್‌ನಲ್ಲಿ ಮೂವತ್ತಕ್ಕೂ ಹೆಚ್ಚು ಮಕ್ಕಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಸಂಜೆ ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಎದುರಿನಿಂದ ಬಂದ ಬೈಕ್‌ನ್ನು ತಪ್ಪಿಸಲು ಯತ್ನಿಸಿದಾಗ ಬಸ್ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಮೂವರಿಗೂ ಅಧಿಕ ಮಕ್ಕಳಿಗೆ ಗಾಯಗಳಾಗಿದ್ದು, ಗಾಯಾಳು ಮಕ್ಕಳನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕ ಗಗನ್ ಅವರಿಗೂ ಗಾಯಗಳಾಗಿವೆ.
ಘಟನೆ ಹಿನ್ನೆಲೆಯಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

