ಮಡಿಕೇರಿಯಲ್ಲಿ ಎಂಡಿಎಂಎ ಮಾದಕ ವಸ್ತು ಜಪ್ತಿ
₹4.04 ಲಕ್ಷ ಮೌಲ್ಯದ ಮಾದಕ ವಸ್ತು ವಶ; ಇಬ್ಬರ ಬಂಧನ
ಮಡಿಕೇರಿ: ನಗರದ ಗೌಳಿಬೀದಿಯ ಕಂಚಿ ಕಾಮಾಕ್ಷಿ ದೇವಸ್ಥಾನದ ಸಮೀಪದ ಸಾರ್ವಜನಿಕ ಮೈದಾನದಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಮಡಿಕೇರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಕ್ಟೋಬರ್ 30ರಂದು ರುಹೇಜ್ ಶೇಖ್ (29) ಹಾಗೂ ಮೊಹಮ್ಮದ್ ಶಾಕೀಬ್ (19) ಮತ್ತೊಬ್ಬ ಅಪರಿಚಿತ ವ್ಯಕ್ತಿಯೊಂದಿಗೆ ಆಟೋ ರಿಕ್ಷಾದಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಪತ್ರಾಂಕಿತ ಅಧಿಕಾರಿಯೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದರು.
ದಾಳಿಯ ವೇಳೆ ಆರೋಪಿಗಳಿಂದ 11 ಗ್ರಾಂ ಎಂಡಿಎಂಎ ಮಾದಕ ವಸ್ತು, ಐದು ಮೊಬೈಲ್ ಫೋನ್ಗಳು, ಒಂದು ಆಟೋ ರಿಕ್ಷಾ, ತೂಕದ ಯಂತ್ರ ಹಾಗೂ ಒಂದು ಬ್ಯಾಗ್ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ₹4.04 ಲಕ್ಷ ಎಂದು ಅಂದಾಜಿಸಲಾಗಿದೆ.
ಈ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯ ಕಲಂ 22ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ವಶಕ್ಕೆ ಪಡೆದವರಲ್ಲಿ ರುಹೇಜ್ ಶೇಖ್ ಆಟೋ ಚಾಲಕನಾಗಿದ್ದು, ಮೊಹಮ್ಮದ್ ಶಾಕೀಬ್ ಬಿಬಿಎ ವಿದ್ಯಾರ್ಥಿಯಾಗಿದ್ದಾನೆ. ಪ್ರಕರಣದಲ್ಲಿ ಉಲ್ಲೇಖಿಸಲಾದ ಮತ್ತೊಬ್ಬ ವ್ಯಕ್ತಿಯ ಗುರುತು ಹಾಗೂ ಪಾತ್ರದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

