ಹಾರಂಗಿ ಹಿನ್ನೀರಿನಲ್ಲಿ ಬೋಟಿಂಗ್ಗೆ ಶಾಶ್ವತ ನಿಷೇಧ ಹೇರಲು ನಾಪಂಡ ಮುತ್ತಪ್ಪ ಒತ್ತಾಯ
ಕುಶಾಲನಗರ: ಹಾರಂಗಿ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಸಂಭವಿಸಿದ ದುರಂತದಲ್ಲಿ ಗುಜರಾತ್ ಮೂಲದ ದಂಪತಿ ಮೃತಪಟ್ಟಿರುವ ಘಟನೆ ಆಘಾತ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಹಾರಂಗಿ ಹಿನ್ನೀರಿನಲ್ಲಿ ಬೋಟಿಂಗ್ ಚಟುವಟಿಕೆಯನ್ನು ಸಂಪೂರ್ಣ ನಿಷೇಧಿಸಬೇಕೆಂದು ಕಾಂಗ್ರೆಸ್ ಮುಖಂಡ ನಾಪಂಡ ಮುತ್ತಪ್ಪ ಒತ್ತಾಯಿಸಿದ್ದಾರೆ.
ಬೋಟಿಂಗ್ ನಡೆಸುವ ಸಂಸ್ಥೆಯ ಬೇಜವಾಬ್ದಾರಿತನ, ನಿರ್ಲಕ್ಷ್ಯ ಹಾಗೂ ಅತಿಯಾದ ವೇಗವೇ ದುರಂತಕ್ಕೆ ಕಾರಣ ಎಂದು ಅವರು ಆರೋಪಿಸಿದ್ದಾರೆ. ದಂಪತಿಯ ಸಾವಿಗೆ ಸಂಬಂಧಿಸಿದಂತೆ ನೀರಾವರಿ, ಅರಣ್ಯ ಮತ್ತು ಪ್ರವಾಸೋದ್ಯಮ ಇಲಾಖೆಗಳು ಜಂಟಿ ಹೊಣೆ ಹೊರಬೇಕು. ಅಲ್ಲದೆ, ಸಂಬಂಧಪಟ್ಟ ಕಂಪನಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.
ಜನರ ಜೀವದ ಸುರಕ್ಷತೆಗೆ ಆದ್ಯತೆ ನೀಡದ ಇಂತಹ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಜಿಲ್ಲೆಯಲ್ಲಿ ಅವಕಾಶ ನೀಡಬಾರದು. ಇನ್ನು ಮುಂದೆ ಯಾವುದೇ ಕಂಪನಿ ಅಥವಾ ವ್ಯಕ್ತಿಗೆ ಹಾರಂಗಿ ಹಿನ್ನೀರಿನಲ್ಲಿ ಬೋಟಿಂಗ್ ನಡೆಸಲು ಅನುಮತಿ ನೀಡಬಾರದು ಎಂದು ನಾಪಂಡ ಮುತ್ತಪ್ಪ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

