ಸಿದ್ದಾಪುರ ಭಾಗದ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ₹25 ಕೋಟಿ ವೆಚ್ಚದಲ್ಲಿ 66/11 ಕೆ.ವಿ. ವಿದ್ಯುತ್ ಘಟಕಕ್ಕೆ ಚಾಲನೆ
ಬೀಟಿಕಾಡಿನಲ್ಲಿ ಶಾಸಕ ಎ.ಎಸ್. ಪೊನ್ನಣ್ಣರಿಂದ ಭೂಮಿಪೂಜೆ
ವಿರಾಜಪೇಟೆ: ಸಿದ್ದಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಬೀಟಿಕಾಡು ಪ್ರದೇಶದಲ್ಲಿ ₹25 ಕೋಟಿ ವೆಚ್ಚದ ನೂತನ 66/11 ಕೆ.ವಿ. ವಿದ್ಯುತ್ ಪ್ರಸರಣ ಘಟಕ ಮತ್ತು ಹೊಸ ವಿದ್ಯುತ್ ಮಾರ್ಗ ಅಳವಡಿಕೆ ಕಾಮಗಾರಿಗೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪೊನ್ನಣ್ಣ, ನೂತನ ವಿದ್ಯುತ್ ಘಟಕ ಕಾರ್ಯಾರಂಭಗೊಂಡ ಬಳಿಕ ಸಿದ್ದಾಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿರಂತರವಾಗಿ ಎದುರಾಗುತ್ತಿರುವ ವಿದ್ಯುತ್ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದರು.
ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಪೂರೈಕೆ ಕಲ್ಪಿಸುವ ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ವಿಶೇಷ ಅನುದಾನ ಒದಗಿಸಿದೆ. ಇದರಿಂದ ಕೃಷಿಕರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಹೊಸ ವಿದ್ಯುತ್ ಮಾರ್ಗದ ಅಳವಡಿಕೆಯಿಂದ ವಿದ್ಯುತ್ ಪ್ರಸರಣ ವ್ಯವಸ್ಥೆಯೂ ಸುಧಾರಿಸಲಿದೆ ಎಂದು ತಿಳಿಸಿದರು.
ಕ್ಷೇತ್ರದಾದ್ಯಂತ ವಿದ್ಯುತ್ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಈ ಯೋಜನೆ ಪೂರ್ಣಗೊಂಡ ಬಳಿಕ ಜನರು ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗಳು ಗಣನೀಯವಾಗಿ ಕಡಿಮೆಯಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ವಲಯ ಅಧ್ಯಕ್ಷ ಪ್ರತೀಶ್, ಕಾವೇರಿ ಜಲಾನಯನ ಮಂಡಳಿ ನಿರ್ದೇಶಕ ಸೂರಜ್ ಹೊಸೂರು, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ವಿ. ಜಾನ್ಸನ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

