
ಸುಂಟಿಕೊಪ್ಪ: ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಸುಂಟಿಕೊಪ್ಪ ಪೊಲೀಸ್ ಠಾಣೆ ವತಿಯಿಂದ ಕೊಡಗರಹಳ್ಳಿಯ ಶಾಂತಿನಿಕೇತನ ಶಾಲೆಯಲ್ಲಿ ‘ಬೇಡ ಬ್ರೋ’ (Beda Bro) ಅಭಿಯಾನ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ ನಡೆಯಿತು.
ಕುಶಾಲನಗರ ವೃತ್ತದ ಸಿಪಿಐ ದಿನೇಶ್ ಕುಮಾರ್ ಬಿ.ಎಸ್. ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾದಕ ವಸ್ತುಗಳ ವ್ಯಸನವು ವಿದ್ಯಾರ್ಥಿಗಳ ಆರೋಗ್ಯ, ವಿದ್ಯಾಭ್ಯಾಸ ಹಾಗೂ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಕುಟುಂಬ ಮತ್ತು ಸಮಾಜದ ನೆಮ್ಮದಿಯನ್ನೂ ಹಾಳುಮಾಡುತ್ತದೆ ಎಂದು ಎಚ್ಚರಿಸಿದರು.
ಯಾರಾದರೂ ಮಾದಕ ವಸ್ತುಗಳ ಸೇವನೆಗೆ ಪ್ರೇರೇಪಿಸಿದರೆ ಧೈರ್ಯವಾಗಿ ‘ಬೇಡ ಬ್ರೋ’ ಎಂದು ನಿರಾಕರಿಸಬೇಕು. ಇಂತಹ ಚಟುವಟಿಕೆಗಳು ಕಂಡುಬಂದಲ್ಲಿ ಪೋಷಕರು ಅಥವಾ ಪೊಲೀಸರಿಗೆ ಮಾಹಿತಿ ನೀಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಇದೇ ವೇಳೆ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಪ್ರಾತ್ಯಕ್ಷಿಕೆ ಹಾಗೂ ವಿಡಿಯೋಗಳ ಮೂಲಕ ಅರಿವು ಮೂಡಿಸಲಾಯಿತು. ದ್ವಿಚಕ್ರ ವಾಹನ ಸವಾರರು ಐಎಸ್ಐ ಗುಣಮಟ್ಟದ ಹೆಲ್ಮೆಟ್ ಧರಿಸುವುದು, ಕಾರಿನಲ್ಲಿ ಪ್ರಯಾಣಿಸುವಾಗ ಸೀಟ್ ಬೆಲ್ಟ್ ಕಡ್ಡಾಯವಾಗಿ ಬಳಸುವುದು ಸೇರಿದಂತೆ ಸುರಕ್ಷತಾ ಕ್ರಮಗಳ ಮಹತ್ವವನ್ನು ವಿವರಿಸಲಾಯಿತು.
18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪ್ರಾಪ್ತರು ವಾಹನ ಚಾಲನೆ ಮಾಡಿ ಸಿಕ್ಕಿಬಿದ್ದರೆ ಪೋಷಕರಿಗೂ ದಂಡ ಹಾಗೂ ಕಾನೂನು ಕ್ರಮ ಎದುರಾಗುವ ಬಗ್ಗೆ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕ ವೃಂದ, ಸುಂಟಿಕೊಪ್ಪ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

