ಸಂವಿಧಾನ ದೇಶದ ಧರ್ಮಗ್ರಂಥ – ಗಣ್ಯರ ಅಭಿಮತ
ಮಡಿಕೇರಿ: ಭಾರತೀಯ ಜನತಾ ಪಾರ್ಟಿಯ ಎಸ್.ಸಿ. ಮೋರ್ಚಾ ವತಿಯಿಂದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸಂವಿಧಾನ ಗೌರವ ದಿವಸವನ್ನು ಆಚರಿಸಲಾಯಿತು.
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದ ಎಸ್.ಸಿ. ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ. ರವಿ ಮೊಗೇರ ಅವರು, ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಪ್ರಮುಖ ಕಾರಣವಾಗಿದೆ. ದೇಶದ ಎಲ್ಲಾ ಪ್ರಜೆಗಳಿಗೂ ಮತದಾನದ ಹಕ್ಕು ನೀಡುವ ಮೂಲಕ ರಾಜಕೀಯ ಸಮಾನತೆಯನ್ನು ಕಲ್ಪಿಸಿದೆ ಎಂದು ಹೇಳಿದರು.
ದೇಶದಲ್ಲಿ 60 ವರ್ಷಗಳ ಕಾಲ ಅಧಿಕಾರ ನಡೆಸಿದ ಕಾಂಗ್ರೆಸ್ ಸರ್ಕಾರ ಅಂಬೇಡ್ಕರ್ ಅವರನ್ನು ಕಡೆಗಣಿಸಿ, ಅವರಿಗೆ ಸೂಕ್ತ ಗೌರವ ನೀಡಲಿಲ್ಲ ಎಂದು ಟೀಕಿಸಿದರು.
ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಮಾತನಾಡಿ, ಭಾರತೀಯ ಪ್ರಜೆಗಳಿಗೆ ಎಲ್ಲ ಕ್ಷೇತ್ರಗಳಲ್ಲೂ ಸಮಾನತೆ ದೊರೆಯಲು ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ಕಾರಣವಾಗಿದೆ. ಜಗತ್ತಿನ ಅತಿದೊಡ್ಡ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರು ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸಿದ್ದಾರೆ. ಕೂಲಿ ಕಾರ್ಮಿಕರಿಂದ ಹಿಡಿದು ಪ್ರತಿಯೊಬ್ಬ ಭಾರತೀಯನಿಗೂ ಸಂವಿಧಾನದ ಬಗ್ಗೆ ಅಭಿಮಾನವಿರಬೇಕು. ಎಲ್ಲರೂ ಸಂವಿಧಾನವನ್ನು ಗೌರವಿಸಬೇಕು ಎಂದರು.
ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನ ನಮ್ಮ ದೇಶದ ದೊಡ್ಡ ಧರ್ಮಗ್ರಂಥವಾಗಿದೆ. ಕಾಂಗ್ರೆಸ್ ಪಕ್ಷ ಸಂವಿಧಾನದ ಪುಸ್ತಕವನ್ನು ಪ್ರದರ್ಶಿಸಿ ತಾವೇ ಸಂವಿಧಾನದ ರಕ್ಷಕರು ಎಂದು ಬಿಂಬಿಸಿಕೊಳ್ಳುತ್ತಿದೆ. ಆದರೆ ಸಂವಿಧಾನಕ್ಕೆ 75ಕ್ಕೂ ಹೆಚ್ಚು ಬಾರಿ ತಿದ್ದುಪಡಿ ಮಾಡಿರುವುದು ಕಾಂಗ್ರೆಸ್ ಸರ್ಕಾರ ಎಂದು ಟೀಕಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಂಬೇಡ್ಕರ್ ಅವರಿಗೆ ಗೌರವ ದೊರೆತಿದೆ. ಗ್ರಾಮ ಪಂಚಾಯಿತಿಯಿಂದ ಸಂಸತ್ತಿನವರೆಗೆ ಸಂವಿಧಾನದ ಘನತೆ ಹೆಚ್ಚಿಸುವ ಕಾರ್ಯ ನಡೆದಿದೆ ಎಂದರು.
ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷ ರಾಬಿನ್ ದೇವಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ವಿ.ಕೆ. ಲೋಕೇಶ್, ರೈತ ಮೋರ್ಚಾ ಅಧ್ಯಕ್ಷ ರಂಜಿ ಪೂಣಚ್ಚ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಕೊಲೆಯಂಡ ಗಿರೀಶ್, ಎಸ್.ಟಿ. ಮೋರ್ಚಾ ಅಧ್ಯಕ್ಷ ಪರಮೇಶ್ವರ, ಸೋಮವಾರಪೇಟೆ ಎಸ್.ಸಿ. ಮೋರ್ಚಾ ಮಂಡಲ ಅಧ್ಯಕ್ಷ ರಾಮಕೃಷ್ಣ, ಪ್ರಮುಖರಾದ ಬೊಳ್ಳಜಿರ ಅಯ್ಯಪ್ಪ, ಕನ್ನಂಡ ಸಂಪತ್, ಜೇತನ್ ಶಿವಪ್ಪ, ಕನ್ನಿಕೆ, ಅಪ್ಪಣ್ಣ, ಚಂದ್ರ, ಸೌಮ್ಯ, ಹೀರಾ ಸುಬ್ಬಯ್ಯ, ಮನು ಮಂಜುನಾಥ್, ಕಾಂಗಿರ ಸತೀಶ್, ಗೋವಿಂದರಾಜು, ಕೆಂಚೇಶ್ವರ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

